ಮಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಪತಿಗೆ ಸುಳ್ಳು ಆರೋಪ ಹೊರಿಸಿದ್ದ ಪತ್ನಿ

ತನ್ನ ಮೂರೂವರೆ ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬೆಂಗಳೂರಿನ ಫ್ರೆಂಚ್ ರಾಯಭಾರ ಕಚೇರಿಯ ಮಾಜಿ ಉದ್ಯೋಗಿ ಪ್ಯಾಸ್ಕಲ್ ಮಝರಿಯರ್ ಅವರನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಈ ಸಂಬಂಧ ಮಝರಿಯರ್ ಪತ್ನಿ ಸುಜಾ ಜೋನ್ಸ್ ಮಝುರಿಯರ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ.
‘ವಿಚ್ಛೇದನ ಪಡೆಯಲು ಅರ್ಜಿ ಸಲ್ಲಿಸುತ್ತಿರುವ ಸಮಯದಲ್ಲಿ ಮಕ್ಕಳೊಂದಿಗೆ ದೇಶ ಬಿಟ್ಟು ಹೋಗುವುದನ್ನು ತಡೆಯಲು ಸುಜಾ ತಮ್ಮ ಪತಿ ವಿರುದ್ಧ ಸುಳ್ಳು ಆರೋಪ ಹೊರಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ’ ಎಂಬ ವಿಚಾರಣಾ ನ್ಯಾಯಾಲಯದ ಅಭಿಪ್ರಾಯವನ್ನು ನ್ಯಾಯಪೀಠ ಪರಿಗಣಿಸಿದೆ.
ತನ್ನ ಮಗಳ ಮೇಲೆಯೇ ತಂದೆ ಅತ್ಯಾಚಾರ ಎಸಗಿದ್ದಾರೆಂದು ಸುಜಾ ಅವರು ತಮ್ಮ ಪತಿ ಪಾಸ್ಕಲ್ ಮಝರಿಯರ್ ವಿರುದ್ಧ 2012ರ ಜೂನ್ 14 ರಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಪೊಲೀಸರು ವಿಚಾರಣೆ ನಡೆಸಿ ಮಝರಿಯರ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ಆದರೆ, ವಿಚಾರಣಾ ನ್ಯಾಯಾಲಯವು ಸಾಕ್ಷ್ಯಾಧಾರದ ಕೊರತೆ ಹಿನ್ನೆಲೆಯಲ್ಲಿ 2017ರ ಏ.19ರಂದು ಮಝರಿಯರ್ ವಿರುದ್ಧದ ಆರೋಪ ಕೈಬಿಟ್ಟು ಖುಲಾಸೆಗೊಳಿಸಿತ್ತು. ಅದನ್ನು ಪ್ರಶ್ನಿಸಿ ಸುಜಾ ಅವರು ಹೈಕೋರ್ಟ್ ಮೊರೆ ಹೋಗಿದ್ದರು.