ಹಿಂದೂಸ್ತಾನಿ ಗಾಯಕ ಪಂಡಿತ ವೆಂಕಟೇಶ್ ಕುಮಾರ್ಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

ಮೈಸೂರು: ನಾಡಹಬ್ಬ ದಸರಾದಲ್ಲಿನೀಡಲಾಗುವ ‘ಸಂಗೀತ ವಿದ್ವಾನ್’ ಪ್ರಶಸ್ತಿ ಈ ಭಾರಿ ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ವೆಂಕಟೇಶ್ ಕುಮಾರ್ (pandit Venkatesh kumar) ಅವರಿಗೆ ಒಲಿದಿದೆ. ರಾಜ್ಯ ಸರ್ಕಾರ ಶನಿವಾರ ಪ್ರಶಸ್ತಿ ಘೋಷಣೆ ಮಾಡಿದೆ. ಪಂಡಿತ ವೆಂಕಟೇಶ್ ಕುಮಾರ್ ಅವರು ಹಿಂದೂಸ್ತಾನಿ ಸಂಗೀತದಲ್ಲಿ ದೇಶಾದ್ಯಂತ ಖ್ಯಾತಿ ಗಳಿಸಿದ್ದಾರೆ.

ಸಚಿವ ಶಿವರಾಜ ತಂಗಡಗಿ ಹೇಳಿದ್ದಿಷ್ಟು
ಈ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದಾರೆ. ಪ್ರತಿ ವರ್ಷ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರು ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ. ಕೆ ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಡಾ. ವೈ.ಕೆ ಮುದ್ದುಕೃಷ್ಣ ಅವರ ಆಯ್ಕೆ ಸಲಹಾ ಸಮಿತಿ ಪಂ. ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ ಮಾಡಲಾಗಿದೆ. ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ ಪಂ. ವೆಂಕಟೇಶ್ ಕುಮಾರ್ ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ ಎಂದರು.
ಸೆಪ್ಟೆಂಬರ್ 22ರಂದು ಮೈಸೂರಿನ ಅರಮನೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಈ ಪ್ರಶಸ್ತಿ ಐದು ಲಕ್ಷ ರೂ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.