ಶೇಕ್ಹ್ಯಾಂಡ್ ಸೂಚಿಸಿದ ಗಂಭೀರ್!

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಶೇಕ್ಹ್ಯಾಂಡ್ ವಿವಾದ ಮುಂದುವರೆದಿದೆ. ಸೆಪ್ಟೆಂಬರ್ 14 ರಂದು ನಡೆದ ಪಂದ್ಯದ ಬಳಿಕ ಟೀಮ್ ಇಂಡಿಯಾ ಆಟಗಾರರು ಪಾಕ್ ಆಟಗಾರರೊಂದಿಗೆ ಹಸ್ತಲಾಘವ ಮಾಡಲು ನಿರಾಕರಿಸಿದ್ದರು. ಭಾರತೀಯ ಆಟಗಾರರ ಈ ನಡೆಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಟೂರ್ನಿಯಿಂದ ಹಿಂದೆ ಸರಿಯುವ ಗೊಡ್ಡು ಬೆದರಿಕೆಯೊಡ್ಡಿದ್ದರು.

ಇದಾಗ್ಯೂ ಟೀಮ್ ಇಂಡಿಯಾ ಆಟಗಾರರು ತಮ್ಮ ನಿಲುವು ಬದಲಿಸಿಲ್ಲ. ಸೆಪ್ಟೆಂಬರ್ 21 ರಂದು ದುಬೈನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 2ನೇ ಪಂದ್ಯದ ವೇಳೆಯೂ ಭಾರತೀಯ ಆಟಗಾರರು ಶೇಕ್ಹ್ಯಾಂಡ್ ನೀಡಿಲ್ಲ. ಪಂದ್ಯ ಮುಗಿಯುತ್ತಿದ್ದಂತೆ ಟೀಮ್ ಇಂಡಿಯಾ ಆಟಗಾರರು ಡ್ರೆಸ್ಸಿಂಗ್ ರೂಮ್ಗೆ ತೆರಳಿದ್ದಾರೆ.
ಆದರೆ ಈ ಬಾರಿ ಡ್ರೆಸ್ಸಿಂಗ್ ರೂಮ್ಗೆ ತೆರಳಿದ ಟೀಮ್ ಇಂಡಿಯಾ ಆಟಗಾರರನ್ನು ಕೋಚ್ ಗೌತಮ್ ಗಂಭೀರ್ ವಾಪಾಸ್ ಕರೆದಿದ್ದಾರೆ. ಪಾಕ್ ಆಟಗಾರರನ್ನು ನಿರ್ಲಕ್ಷಿಸಿ ತೆರಳಿದ್ದ ಭಾರತೀಯ ಆಟಗಾರರು ಅಂಪೈರ್ಗಳಿಗೆ ಹಸ್ತಲಾಘವ ನೀಡುವುದನ್ನು ಮರೆತಿದ್ದರು.
ಈ ಶಿಷ್ಟಾಚಾರವನ್ನು ಪಾಲಿಸುವಂತೆ ಗೌತಮ್ ಗಂಭೀರ್ ಟೀಮ್ ಇಂಡಿಯಾ ಆಟಗಾರರಿಗೆ ಸೂಚಿಸಿದ್ದಾರೆ. ಅದರಂತೆ ಭಾರತೀಯ ಆಟಗಾರರು ಡ್ರೆಸ್ಸಿಂಗ್ ರೂಮ್ನಿಂದ ಹಿಂತಿರುಗಿ ಅಂಪೈರ್ಗಳ ಜೊತೆ ಕೈ ಕುಲುಕಿದ್ದಾರೆ. ಇದೀಗ ಡ್ರೆಸ್ಸಿಂಗ್ ರೂಮ್ನಿಂದ ಹೊರ ಬಂದು ಅಂಪೈರ್ಗಳ ಕೈಕುಲುಕುವಂತೆ ಕೇಳಿಕೊಳ್ಳುತ್ತಿರುವ ಗೌತಮ್ ಗಂಭೀರ್ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ:
ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿದ್ದರು.
172 ರನ್ಗಳ ಸ್ಪರ್ಧಾತ್ಮಕ ಗುರಿ ಪಡೆದ ಟೀಮ್ ಇಂಡಿಯಾಗೆ ಅಭಿಷೇಕ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಸ್ಫೋಟಕ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 105 ರನ್ಗಳ ಜೊತೆಯಾಟವಾಡಿದ ಬಳಿಕ ಶುಭ್ಮನ್ ಗಿಲ್ (47) ವಿಕೆಟ್ ಒಪ್ಪಿಸಿದರು.
ಇದಾಗ್ಯೂ ಮತ್ತೊಂದೆಡೆ ಆರ್ಭಟ ಮುಂದುವರೆಸಿದ ಅಭಿಷೇಕ್ ಶರ್ಮಾ 39 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 74 ರನ್ ಚಚ್ಚಿದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 18.5 ಓವರ್ಗಳಲ್ಲಿ 174 ರನ್ ಬಾರಿಸಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಭಾರತ ಪ್ಲೇಯಿಂಗ್ ಇಲೆವೆನ್: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
