ಭೂ ಪರಿವರ್ತನೆ ಪ್ರಕ್ರಿಯೆ ಸರಳೀಕರಣ: ನಿಯಮಗಳ ಅಂತಿಮ ಅಧಿಸೂಚನೆ ಒಂದು ತಿಂಗಳಲ್ಲಿ ಪ್ರಕಟ – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು/ಬೆಳಗಾವಿ: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ (Land Conversion) ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತಿಳಿಸಿದ್ದಾರೆ.


ವಿಧಾನ ಪರಿಷತ್ (Legislative Council) ಪ್ರಶ್ನೋತ್ತರ ಕಾಲದಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿ ಗೌಡ ಪ್ರಶ್ನೆಗೆ ಉತ್ತರಿಸಿದ ಅವರು,ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ ಎಂದರು.

ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು 2025ರ ಸೆ.17ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಹೇಳಿದರು.

ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 2 ಎಕರೆವರೆಗೆ ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪ್ರೂವ್ ಮಾಡಿಸಿಕೊಳ್ಳಬಹುದಾಗಿದೆ ಹಾಗೂ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪರಿವರ್ತನೆ ಅಗತ್ಯವಿಲ್ಲ ಮತ್ತು ಕಂದಾಯ ನ್ಯಾಯಾಲಯ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ. ಇನ್ನೊಂದು ತಿಂಗಳಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದರು.