ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಶಿಕ್ಷಕನಿಗೆ ಜೈಲು ಶಿಕ್ಷೆ!

ಕೊಳ್ಳೇಗಾಲ: ವಿದ್ಯಾರ್ಥಿಯ ತಾಯಿ ಮೇಲೆ ಶಾಲೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶನಿವಾರ 3 ವರ್ಷ ಕಠಿಣ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ವೆಂಕಟನಾರಾಯಣ ಶಿಕ್ಷೆಗೊಳಗಾದ ಶಿಕ್ಷಕ.

ಈತ ಹನೂರು ತಾಲ್ಲೂಕಿನ ಕುರುಬರದೊಡ್ಡಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ವಿದ್ಯಾರ್ಥಿಗಳಿಗೆ ನೀಡುವ ಆಹಾರ ಪದಾರ್ಥಗಳನ್ನು ಪಡೆಯಲು ಬಾಲಕನ ತಾಯಿ ಬಂದಿದ್ದಾಗ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.
ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಾಕ್ಷ್ಯಾಧಾರಗಳಿಂದ ಅಪರಾಧ ಸಾಬೀತಾದ ಹಿನ್ನೆಲೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಟಿ.ಸಿ ಶ್ರೀಕಾಂತ್ ಅವರು ಮೂರು ವರ್ಷ ಕಠಿಣ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಗಿರೀಶ್ ವಾದ ಮಂಡಿಸಿದ್ದರು.