ಮಧ್ಯಪ್ರಾಚ್ಯ ಯುದ್ಧ: ವಾಣಿಜ್ಯ ಹಡಗಿನ ಮೇಲೆ ದಾಳಿ; ಇಬ್ಬರು ಭಾರತೀಯರ ಮೃತ್ಯು, ಓರ್ವ ನಾಪತ್ತೆ

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಯುದ್ಧದ ನಡುವೆ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದು, ಓರ್ವ ನಾಪತ್ತೆಯಾಗಿದ್ದಾರೆ ಎಂದು ಬುಧವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಮಧ್ಯಪ್ರಾಚ್ಯ ಪ್ರಾಂತ್ಯದಲ್ಲಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಭಾರತೀಯರಿದ್ದ ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದ್ದು, ಇದರಿಂದ ಈ ಸಾವುಗಳು ಸಂಭವಿಸಿವೆ ಎಂದು ಹೇಳಲಾಗಿದೆ.
ಈ ಬೆಳವಣಿಗೆಯನ್ನು ದೃಢಪಡಿಸಿರುವ ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್, ಸಂತ್ರಸ್ತ ಭಾರತೀಯ ಪ್ರಜೆಗಳು ಹಾಗೂ ಅವರ ಕುಟುಂಬಗಳಿಗೆ ಅಗತ್ಯ ಸಹಾಯ ಒದಗಿಸಲಾಗುತ್ತಿದೆ. ನಾವು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತಿದ್ದೇವೆ ಎಂದು ತಿಳಿಸಿದಾರೆ.

“ಕೆಲವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ನಾವು ಇಬ್ಬರು ಭಾರತೀಯ ಪ್ರಜೆಗಳನ್ನು ಕಳೆದುಕೊಂಡಿದ್ದು, ಓರ್ವ ವ್ಯಕ್ತಿ ನಾಪತ್ತೆಯಾಗಿದ್ದಾರೆ. ವಾಣಿಜ್ಯ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಈ ಘಟನೆ ನಡೆದಿದೆ” ಎಂದು ಅವರು ಹೇಳಿದ್ದಾರೆ.
ಕೊಲ್ಲಿ ಪ್ರಾಂತ್ಯದಲ್ಲಿ ಗಾಯಗೊಂಡಿರುವ ಭಾರತೀಯರಿಗೆ ವೈದ್ಯಕೀಯ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ದೃಢಪಡಿಸಿದೆ. ಅಧಿಕಾರಿಗಳ ಪ್ರಕಾರ, ದುಬೈನಲ್ಲಿ ಗಾಯಗೊಂಡಿರುವ ಓರ್ವ ಭಾರತೀಯ ಪ್ರಜೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
“ನಮ್ಮ ದೂತಾವಾಸವು ಅವರೊಂದಿಗೆ ಸಂಪರ್ಕದಲ್ಲಿದೆ. ಇಂದು ಬೆಳಿಗ್ಗೆ ದುಬೈನಲ್ಲಿ ಓರ್ವ ಭಾರತೀಯ ಪ್ರಜೆ
ಗಾಯಗೊಂಡಿದ್ದಾರೆ ಎಂಬ ವರದಿಗಳನ್ನು ನಾವು ಗಮನಿಸಿದ್ದೇವೆ. ಈ ವ್ಯಕ್ತಿಯೊಂದಿಗೆ ನಮ್ಮ ದೂತಾವಾಸ ಸಂಪರ್ಕದಲ್ಲಿದ್ದು,
ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಲ್ಯಾಣ ಮತ್ತು ಆರೋಗ್ಯವನ್ನು ಖಾತರಿಪಡಿಸಲು ನಾವು
ನಿಯಮಿತವಾಗಿ ಸಂಪರ್ಕದಲ್ಲಿದ್ದೇವೆ” ಎಂದು ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಈ ನಡುವೆ, ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ ಉಲ್ಬಣಗೊಂಡಿದ್ದು, ಅಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆಗೆ ಸಂಬಂಧಿಸಿದ ಕಳವಳಗಳಿಗೆ ಸ್ಪಂದಿಸಲು ಭಾರತ ಸರಕಾರ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ.