ಮಾಧ್ಯಮಗಳ ವಿರುದ್ಧ ಹೈಕೋರ್ಟ್ಗೆ ನಟ ದರ್ಶನ್ ಅರ್ಜಿ: ಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿವರಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯದ ನಿರ್ಬಂಧ ಆದೇಶವನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ (ಚಾನಲ್) ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯು ನ್ಯಾಯಮೂರ್ತಿ ಸಚಿನ್ ಶಂಕರ್ ಮುಗದಂ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ಬಗ್ಗೆ ನಿಲುವು ತಿಳಿಸುವಂತೆ ಕೇಂದ್ರ ಸರಕಾರಕ್ಕೆ ನ್ಯಾಯಪೀಠ ಸೂಚಿಸಿತು. ಅದಕ್ಕೆ ಕೇಂದ್ರ ಸರಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ ಕಾಮತ್ ಪ್ರತಿಕ್ರಿಯಿಸಿ, ಅರ್ಜಿಯಲ್ಲಿ ಕೋರಲಾದ ಮನವಿ ಕುರಿತು ಯಾವ ಕ್ರಮ ಕೈಗೊಳಲಾಗುವುದು ಎಂಬ ಬಗ್ಗೆ ಸೋಮವಾರದೊಳಗೆ ತಿಳಿಸಲಾಗುವುದು ಎಂದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಎಪ್ರಿಲ್ 6ಕ್ಕೆ ಮುಂದೂಡಿತು.

ಸುದ್ದಿ ವಾಹಿನಿಗಳು ಗ್ರಾಫಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ಅನಿಮೇಷನ್ಗಳನ್ನು ಬಳಸಿಕೊಂಡು ನ್ಯಾಯಾಲಯದ ಪ್ರಕ್ರಿಯೆಗಳು ಮತ್ತು ಅಪರಾಧದ ದೃಶ್ಯವನ್ನು ಮರುಸೃಷ್ಟಿಸುತ್ತಿವೆ ಮತ್ತು ವಿಚಾರಣಾ ನ್ಯಾಯಾಲಯವು ದಾಖಲಿಸಿದ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಚರ್ಚೆಗಳನ್ನು ನಡೆಸುತ್ತಿವೆ. ಇದು 2024 ರಲ್ಲಿ ಕರ್ನಾಟಕ ಹೈಕೋರ್ಟ್ ಮತ್ತು ಸಿಟಿ ಸಿವಿಲ್ ನ್ಯಾಯಾಲಯವು ಹೊರಡಿಸಿದ ತಡೆಯಾಜ್ಞೆಯ ಆದೇಶಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಅಲ್ಲದೆ, ಸುದ್ದಿವಾಹಿನಿಗಳು ಉದ್ದೇಶಪೂರ್ವಕವಾಗಿ ವಿಚಾರಣೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪ್ರಸಾರ ಮಾಡುತ್ತಿವೆ. ಇದು ಸಂವಿಧಾನದ ಕಲಂ 14 ಮತ್ತು ಕಲಂ 21 ರ ಅಡಿಯಲ್ಲಿ ಖಾತರಿಪಡಿಸಲಾದ ಹಕ್ಕುಗಳನ್ನು ಉಲ್ಲಂಘನೆಯಾಗಿದೆ. ಆದ್ದರಿಂದ ಈ ಸಂಬಂಧ 2026ರ ಜನವರಿ 16ರಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನೀಡಿದ ದೂರು ಪರಿಗಣಿಸಬೇಕು ಹಾಗೂ ಕೋರ್ಟ್ ಆದೇಶಗಳನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ನಟ ದರ್ಶನ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.