ತಮಿಳುನಾಡು ರಾಜಕೀಯ ಹೈಡ್ರಾಮಾ: ಹೈದರಾಬಾದ್ನಲ್ಲಿ ಕಾಂಗ್ರೆಸ್ ಶಾಸಕರ ವಾಸ್ತವ್ಯ

ಹೈದರಾಬಾದ್: ತಮಿಳುನಾಡಿನಲ್ಲಿ ಸರ್ಕಾರ ರಚನೆ ಕುರಿತ ರಾಜಕೀಯ ಅನಿಶ್ಚಿತತೆ ಮುಂದುವರಿದಿರುವ ನಡುವೆಯೇ, ಕಾಂಗ್ರೆಸ್ ಪಕ್ಷದ ಐವರು ಶಾಸಕರು ಹೈದರಾಬಾದ್ನಲ್ಲಿ ಬೀಡುಬಿಟ್ಟಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ.
ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರನ್ನು ಸರ್ಕಾರ ರಚಿಸಲು ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಆಹ್ವಾನಿಸಲು ವಿಳಂಬ ಮಾಡುತ್ತಿರುವ ನಡುವೆಯೇ ಕಾಂಗ್ರೆಸ್ ಶಾಸಕರು ಗುರುವಾರ ಹೈದರಾಬಾದ್ಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಆರಂಭದಲ್ಲಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಸ್ಪಷ್ಟತೆ ಬಂದ ತಕ್ಷಣವೇ ಅವರು ಮರಳುವ ನಿರೀಕ್ಷೆ ಇತ್ತು. ಆದರೆ, ತಮಿಳುನಾಡಿನ ರಾಜಕೀಯ ಪರಿಸ್ಥಿತಿ ಮತ್ತಷ್ಟು ಗೊಂದಲಕ್ಕೀಡಾದ ಹಿನ್ನೆಲೆಯಲ್ಲಿ ಶಾಸಕರು ತಮ್ಮ ವಾಪಸಾತಿಯನ್ನು ಮುಂದೂಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕಾರಿಯೊಬ್ಬರು ಶಾಸಕರು ಹೈದರಾಬಾದ್ನಲ್ಲಿ ತಂಗಿರುವುದನ್ನು ದೃಢಪಡಿಸಿದ್ದಾರೆ.
ವಿಜಯ್ ಅವರ ಪ್ರಮಾಣವಚನ ಸಮಾರಂಭದ ಕುರಿತೂ ಇನ್ನೂ ಸ್ಪಷ್ಟ ಚಿತ್ರಣ ಹೊರಬಂದಿಲ್ಲ. ಹೊಸ ರಾಜಕೀಯ ಬೆಳವಣಿಗೆಗಳು ಪ್ರಮಾಣವಚನ ಸಮಾರಂಭದ ಮೇಲೂ ಕರಿನೆರಳು ಬೀರಿದ್ದು ಸರ್ಕಾರ ರಚನೆ ಪ್ರಕ್ರಿಯೆ ಯಾವ ದಿಕ್ಕಿಗೆ ಸಾಗಲಿದೆ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.
ರಾಜಕೀಯ ಬೆಳವಣಿಗೆಗಳು ಸರಿಯಾದ ಬಳಿಕ ಶಾಸಕರು ಚೆನ್ನೈಗೆ ಮರಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.