Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜೂನ್ 1 ರಂದು 1,000 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಅಧಿಕೃತ ಚಾಲನೆ; ಸಚಿವ ಮಧು ಬಂಗಾರಪ್ಪ ಘೋಷಣೆ!

Spread the love

ಶಿವಮೊಗ್ಗ: ಬೆಲೆ ಕಟ್ಟಲಾಗದ ಗುಣಮಟ್ಟದ ಶಿಕ್ಷಣವನ್ನು ಇಡೀ ದೇಶಕ್ಕೆ ಮಾದರಿಯಾಗಿ ಕರ್ನಾಟಕ ನೀಡುತ್ತಿದ್ದು, ಜೂ.1ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1,000 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ (ಕೆಪಿಎಸ್) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಶುಕ್ರವಾರ ನಗರದ ಅಲ್ಲಮಪ್ರಭು ಮೈದಾನಕ್ಕೆ ಭೇಟಿ ನೀಡಿ ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ಧತೆ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ರಾಜ್ಯದಲ್ಲಿ ತಲಾ ಸುಮಾರು 3.5 ಕೋಟಿ ರೂ. ವೆಚ್ಚದಲ್ಲಿ 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ಇದು ಶಿಕ್ಷಣ ಕ್ಷೇತ್ರದ ಮಹತ್ವದ ಸಾಧನೆಯಾಗಿದೆ. ಈ ಶಾಲೆಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ದೊರೆಯಲಿದ್ದು, ಇದು ಶಿಕ್ಷಣ ಕ್ಷೇತ್ರದ ಬ್ರಾಂಡ್ ಆಗಿ ಮಕ್ಕಳ ಭವಿಷ್ಯದ ಆಶಾಕಿರಣವಾಗಲಿದೆ ಎಂದು ಹೇಳಿದರು.
800 ಶಾಲೆಗಳನ್ನು ಶಿಕ್ಷಣ ಇಲಾಖೆ ಹಾಗೂ 200 ಶಾಲೆಗಳನ್ನು ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಪಿಯುಸಿ ಪರೀಕ್ಷೆ-2ರಲ್ಲಿ ಶೇ.45 ಫಲಿತಾಂಶ ಬಂದಿದ್ದು, ಒಟ್ಟಾರೆ ಪಿಯುಸಿ ಫಲಿತಾಂಶ ಈಗ ಶೇ.92.25ಕ್ಕೆ ಏರಿಕೆಯಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈ ತಿಂಗಳ ಅಂತ್ಯಕ್ಕೆ ಎಸೆಸೆಲ್ಸಿ ಎರಡನೇ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ಉತ್ತಮ ಫಲಿತಾಂಶದ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿಕ್ಷಣದಲ್ಲಿ ಗುಣಮಟ್ಟ ಹೆಚ್ಚಾಗಿದ್ದು, ಶೇ.60ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರಮಾಣ ಶೇ.62ರಿಂದ ಶೇ.66.5ಕ್ಕೆ ಏರಿಕೆಯಾಗಿದೆ. ಇದು 4.5 ಶೇಕಡಾ ಹೆಚ್ಚಳವಾಗಿದೆ ಎಂದು ಹೇಳಿದರು.
ಅಧಿಕಾರ ವಹಿಸಿಕೊಂಡ ತಕ್ಷಣ ಇಲಾಖೆಗೆ ಅಗತ್ಯವಿದ್ದ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದರು.
ಜೂ.1ರಂದು ಶಿವಮೊಗ್ಗದಲ್ಲಿ 7 ಕೆಪಿಎಸ್ ಶಾಲೆಗಳ ಶಂಕುಸ್ಥಾಪನೆ ನಡೆಯಲಿದ್ದು, ಉಳಿದ ಶಾಲೆಗಳ ಡಿಪಿಆ‌ರ್ ನಂತರ ಸಿದ್ಧಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಹಲವು ಬೇಡಿಕೆಗಳನ್ನು ಸಲ್ಲಿಸಲಾಗುವುದು ಎಂದು ಹೇಳಿದರು.

ತುಮಕೂರಿನಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ 600 ಕೋಟಿ ರೂ. ಕಾಮಗಾರಿಗಳನ್ನು ಘೋಷಿಸಿರುವಂತೆ ಶಿವಮೊಗ್ಗಕ್ಕೂ ವಿಶೇಷ ಅನುದಾನ ಘೋಷಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ದಿನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು ಮಕ್ಕಳೊಂದಿಗೆ ಊಟ ಮಾಡುವರು ಎಂದು ತಿಳಿಸಿದರು.
867 ವಿದ್ಯಾರ್ಥಿಗಳಿಗೆ ಸನ್ಮಾನ :
ಎಸೆಸೆಲ್ಸಿ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚು ಅಂಕ ಪಡೆದ ಜಿಲ್ಲೆಯ 867 ವಿದ್ಯಾರ್ಥಿಗಳನ್ನು ಹಾಗೂ ರಾಜ್ಯದ ಇತರ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಸನ್ಮಾನಿಸಲಾಗುವುದು. ಜಿಲ್ಲೆಯಲ್ಲಿ ಈಗಾಗಲೇ 12 ಕೆಪಿಎಸ್ ಶಾಲೆಗಳಿದ್ದು ಹೊಸದಾಗಿ 19 ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸಲಾಗುವುದು. ಖಾಸಗಿ ಸಂಸ್ಥೆಯೊಂದು ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ನಿಧಿಯಿಂದ 12 ಕೋಟಿ ರೂ. ನೀಡಲು ಮುಂದಾಗಿದೆ ಎಂದು ಮಾಹಿತಿ ನೀಡಿದರು.

ಅಡಿಕೆ ಬೆಳೆ ಹಾನಿಗೆ ವಿಶೇಷ ಪ್ಯಾಕೇಜ್ ಬೇಡಿಕೆ:
ಇತ್ತೀಚೆಗೆ ಬಿರುಗಾಳಿ ಹಾಗೂ ಮಳೆಯಿಂದ ಹೊಳೆಹೊನ್ನೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಅಡಿಕೆ ಬೆಳೆ ಹಾನಿಗೀಡಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಪರಿಹಾರ ನೀಡಲು ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕಿಶ್ ಬಾನು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ್, ಮಾಜಿ ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ ಸಿಇಓ ಎನ್.ಹೇಮಂತ್, ಎಸ್ ಪಿ ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಎಸಿ ಸತ್ಯನಾರಾಯಣ್ ಇತರೆ ಮುಖಂಡರು, ಅಧಿಕಾರಿಗಳು ಹಾಜರಿದ್ದರು.


Spread the love
Share:

administrator

Leave a Reply

Your email address will not be published. Required fields are marked *