ಬೆಂಗಳೂರು: ಇಂದು ಸಂಜೆ 4ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ; ಸಿಎಂ ರೇಸ್ನಲ್ಲಿ ಡಿಕೆಶಿ ಹೆಸರು ಮುಂಚೂಣಿಗೆ!

ಬೆಂಗಳೂರು: ಕಾಂಗ್ರೆಸ್ ಪಕ್ಷದ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಯು ಇಂದು (ಮೇ 30) ಸಂಜೆ 4ಕ್ಕೆ ನಡೆಯಲಿದೆ.
ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಸಂಭಾವ್ಯ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿರುವ ರಾಜೀನಾಮೆಯನ್ನು ಶುಕ್ರವಾರ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ರಾಜ್ಯ ಸಚಿವ ಸಂಪುಟವನ್ನು ವಿಸರ್ಜಿಸಿದ್ದಾರೆ.
ಮೂಲಗಳ ಪ್ರಕಾರ, ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಖಚಿತ ಎಂದು ಹೇಳಲಾಗುತ್ತಿದೆ. ಡಿಕೆಶಿ ಹೆಸರನ್ನು ಸಿದ್ದರಾಮಯ್ಯ ಸೂಚಿಸಲಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ನಡೆಯುವ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಹೋದರ ಡಿ.ಕೆ. ಸುರೇಶ್ ಅವರೊಂದಿಗೆ ಲೋಕಭವನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹೋಟ್ ಅವರನ್ನು ಶನಿವಾರ ಭೇಟಿ ಮಾಡಿದರು.
ಮೂಲಗಳ ಪ್ರಕಾರ, ರಾಜ್ಯಪಾಲರೊಂದಿಗೆ ಡಿ.ಕೆ. ಶಿವಕುಮಾರ್ ಅನೌಪಚಾರಿಕ ಮಾತುಕತೆ ನಡೆಸಿದ್ದು, ನೂತನ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದ ದಿನಾಂಕ ಹಾಗೂ ರಾಜ್ಯಪಾಲರ ಲಭ್ಯತೆ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯಪಾಲ ಗೆಹೋಟ್ ಅವರು ಶನಿವಾರ ಮಧ್ಯಾಹ್ನದ ಬಳಿಕ ಧರ್ಮಸ್ಥಳಕ್ಕೆ ತೆರಳಲಿದ್ದು ರವಿವಾರ ಸಂಜೆ ಬೆಂಗಳೂರಿಗೆ ಮರಳುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಸಿಎಲ್ಪಿ ಸಭೆಗೂ ಮುನ್ನವೇ ರಾಜ್ಯಪಾಲರನ್ನು ಭೇಟಿಯಾಗಿ ಅಗತ್ಯ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.