ಲಕ್ನೋ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಅಗತ್ಯವಿಲ್ಲ; ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆ!

ಲಕ್ಕೆ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಅಗತ್ಯವಿಲ್ಲ. ಭಾರತೀಯ ಸಂಸ್ಕೃತಿಯಲ್ಲಿ ಗೋವಿನ ಸ್ಥಾನವು “ತಾಯಿ”ಗೆ ಸಮಾನವಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಹೇಳಿದ್ದಾರೆ.
ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಭಾರತದಾದ್ಯಂತ ಹಲವಾರು ಮುಸ್ಲಿಂ ಸಂಘಟನೆಗಳು ಆಗ್ರಹಿಸಿರುವ ಬೆನ್ನಲ್ಲೆ ಅವರ ಈ ಹೇಳಿಕೆ ಹೊರ ಬಿದ್ದಿದೆ.
“ಗೋಮಾತೆ ನಮ್ಮ ರಾಷ್ಟ್ರಮಾತೆ. ತಾಯಿ ಮತ್ತು ಮಗುವಿನ ನಡುವಿನ ಬಾಂಧವ್ಯಕ್ಕೆ ಅಧಿಕೃತ ಮಾನ್ಯತೆ ಅಗತ್ಯವಿದೆಯೇ? ಅವಳು ನಿನ್ನ ತಾಯಿ ಅವಳನ್ನು ನೀನು ಗೌರವಿಸು ಎಂದು ಯಾವುದೇ ಮಗನಿಗೆ ಹೇಳಬೇಕಾದ ಅವಸ್ಥೆ ಬಂದಿದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಬಿಳ್ಳೂರ್ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಆದಿತ್ಯನಾಥ್, “ಇದು ನಮ್ಮ ಸಂಸ್ಕಾರವಾಗಿದೆ. ಹಸು ನಮ್ಮ ತಾಯಿ. ಅದು ಬರೀ ಪ್ರಾಣಿಯಲ್ಲ. ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಮುಂದಿಟ್ಟಿರುವ ಬೇಡಿಕೆಗಳು ಅವರ ರಾಕ್ಷಸ ಮನಸ್ಥಿತಿ ಮತ್ತು ಬೂಟಾಟಿಕೆಯನ್ನು ಬಹಿರಂಗಪಡಿಸುತ್ತದೆ” ಎಂದು ಹೇಳಿದರು.
ಇದಕ್ಕೂ ಮೊದಲು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಅಥವಾ ದೇಶಾದ್ಯಂತ ಗೋಹತ್ಯೆ ನಿಷೇಧ ಹೇರುವ ಯಾವುದೇ ಪ್ರಸ್ತಾಪ ಕೇಂದ್ರ ಸರಕಾರದ ಮುಂದಿಲ್ಲ ಎಂದು ಹೇಳಿದ್ದರು.