ಉಡುಪಿಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ದಾಖಲಾದ ಎಫ್‌ಐಆರ್: ಪ್ರಚೋದನಕಾರಿ ಭಾಷಣದ ಆರೋಪ.

ಉಡುಪಿ: ನಗರದ ಹಳೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ನಡೆದ ಪ್ರತಿಭಟನಾ ಸಭೆಯಲ್ಲಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ನೀಡಿದ ವಿವಾದಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆಯು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, “24 ಗಂಟೆಗಳ ಕಾಲ ಡ್ರಗ್ಸ್ ನಶೆಯಲ್ಲಿ ತೇಲುತ್ತಿರುವ ರಾಹುಲ್ ಗಾಂಧಿಗೆ ಚಿಂತನೆ ಮಾಡುವ ಶಕ್ತಿ ಇಲ್ಲ. ಕಾಕ್ರೋಚ್‌ಗಳೊಂದಿಗೆ ಸೇರಿ ನಮ್ಮ ಪ್ರಧಾನಿಯನ್ನು ಟೀಕೆ ಮಾಡುವ ಕೆಲಸ ಮಾಡುತ್ತಿದ್ದಾರೆ. 1992ರಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಬಂದಾಗ ಹೇಗೆ ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದೇವೆಯೋ, ಅದೇ ರೀತಿಯಲ್ಲಿ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುವ ಕಾರ್ಯವನ್ನು ಕಾರ್ಯಕರ್ತರು ಮಾಡಲಿದ್ದಾರೆ” ಎಂದು ಎಚ್ಚರಿಕೆ ನೀಡಿದ್ದರು.
ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್, ಕಾಕ್ರೋಚ್ ಹಾಗೂ ಎಸ್‌ಡಿಪಿಐ ಸೇರಿದಂತೆ ರಾಷ್ಟ್ರವಿರೋಧಿ ಶಕ್ತಿಗಳ ಬೆಂಬಲದಿಂದ ನಡೆಯುತ್ತಿರುವ ಪ್ರತಿಭಟನೆಗಳು ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಅಲ್ಲ, ಬದಲಿಗೆ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಹುನ್ನಾರವಾಗಿದೆ ಎಂದು ಆರೋಪಿಸಿದರು. ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ತಲೆಯಲ್ಲಿ ವಿಷಬೀಜ ಬಿತ್ತುವ ರಾಜಕೀಯ ನಡೆಯುತ್ತಿದೆ ಎಂದು ದೂರಿದರು.
ಇದೇ ವೇಳೆ, ಕಲಾವಿದರನ್ನು ಒಟ್ಟುಗೂಡಿಸಿ ವಿಷಬೀಜ ಬಿತ್ತಲು ಯತ್ನಿಸುತ್ತಿರುವ ಪ್ರಕಾಶ್ ರಾಜ್ ಕರಾವಳಿಯಲ್ಲಿ ಬಂದು ಅಧಿಕ ಪ್ರಸಂಗ ಮಾಡಿದರೆ ಅರಬ್ಬಿ ಸಮುದ್ರದಲ್ಲಿ ಎದ್ದೇಳಬೇಕಾಗುತ್ತದೆ ಅಥವಾ ಮೀನಿಗೆ ಆಹಾರವಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಅಲ್ಲದೆ, ಮಣಿಪಾಲದ ಶಿಕ್ಷಣ ಸಂಸ್ಥೆಯ ಕೇರಳ ಹಾಗೂ ತಮಿಳುನಾಡು ಮೂಲದ ಏಳು ಮಂದಿ ಅಧ್ಯಾಪಕರು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದು, ಪ್ರತಿಭಟನೆಗೆ ಪ್ರಚೋದಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.
ಈ ಪ್ರಚೋದನಕಾರಿ ಹಾಗೂ ದ್ವೇಷ ಭಾಷಣದ ಕುರಿತು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಅವರು ನೀಡಿದ ದೂರಿನ ಆಧಾರದ ಮೇಲೆ, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 103/2026 ದಾಖಲಿಸಲಾಗಿದೆ. ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 57, 192, 196(2), 352, 353(2) ಹಾಗೂ 351(2)ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.