ಕೊಡಗು: ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಮಂದಿ ಗಾಯ!

ಸೋಮವಾರಪೇಟೆ: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಿದ್ದ ಬಸ್‌ವೊಂದು ಪಲ್ಟಿಯಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ವೇಳೆ ಜಲಪಾತದ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಗೆ ಉರುಳಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯರ ನೆರವಿನಿಂದ ಹಾಗೂ ತುರ್ತು ಸೇವೆಗಳ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಕಾರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.