ವಾಟಾಳ್ ನಾಗರಾಜ್ ನೇತೃತ್ವದ ಕರ್ನಾಟಕ ಬಂದ್ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ: ಬೆಂಗಳೂರು ಸೇರಿದಂತೆ ಹಲವೆಡೆ ಜನಜೀವನ ಸಹಜ!

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ರಾಜ್ಯದ ಕೆಲವೆಡೆ ಬೆಳಗ್ಗೆಯಿಂದಲೇ ಪ್ರತಿಭಟನೆಗಳು ಆರಂಭಗೊಂಡಿದ್ದರೂ, ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನಜೀವನ ಸಹಜ ಸ್ಥಿತಿಯಲ್ಲಿದೆ. ವಾಹನಗಳ ಸಂಚಾರವೂ ಎಂದಿನಂತೆ ಮುಂದುವರಿದಿದ್ದು, ಸಾರ್ವಜನಿಕ ಚಟುವಟಿಕೆಗಳಲ್ಲಿ ಯಾವುದೇ ಪ್ರಮುಖ ವ್ಯತ್ಯಯ ಕಂಡುಬಂದಿಲ್ಲ. ಶಾಲಾ-ಕಾಲೇಜುಗಳು, ಅಂಗಡಿ-ಮುಂಗಟ್ಟುಗಳು, ಆಸ್ಪತ್ರೆಗಳು ಹಾಗೂ ಹೋಟೆಲ್ಗಳು ಸೇರಿದಂತೆ ಬಹುತೇಕ ವಾಣಿಜ್ಯ ಮತ್ತು ಸಾರ್ವಜನಿಕ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ರಾಜ್ಯದ ವಿವಿಧೆಡೆ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಉಂಟುಮಾಡದಂತೆ ಪ್ರತಿಭಟನಾಕಾರರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ರಕ್ಷಿಸುವಂತೆ ಆಗ್ರಹಿಸಿ ಹೋರಾಟಕ್ಕೆ ಕರೆ ನೀಡಲಾಗಿದ್ದು, ಬಂದ್ಗೆ ವಿವಿಧ ಸಂಘಟನೆಗಳ ಬೆಂಬಲವೂ ವ್ಯಕ್ತವಾಗಿದೆ.