ಕಾವೂರು ಮುಖ್ಯ ರಸ್ತೆಯಲ್ಲಿ ಭೀಕರ ಅಪಘಾತ: ಸ್ಕೂಟರ್ ಸವಾರರಿಗೆ ಗಂಭೀರ ಗಾಯ!

ಮಂಗಳೂರು: ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಮುಖ್ಯ ರಸ್ತೆಯಲ್ಲಿ ಒಂದು ಸ್ಕೂಟರ್ ಹಾಗೂ ಎರಡು ಬೈಕ್ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು, ಗಾಯಾಳುಗಳನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ.
ಕಾವೂರು ಮುಖ್ಯ ರಸ್ತೆಯಲ್ಲಿ ಯಾವಾಗಲೂ ವಾಹನ ದಟ್ಟಣೆ ಇರುತ್ತದೆಯಾದರೂ, ಅಪಘಾತ ಸಂಭವಿಸಿದ ಸಮಯದಲ್ಲಿ ವಾಹನ ಸಂಚಾರ ವಿರಳವಾಗಿದ್ದ ಕಾರಣ ಸಂಭವಿಸಬಹುದಾಗಿದ್ದ ಇನ್ನೂ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ.
ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.