17 ವರ್ಷದ ಬಾಲಕನ ಜೊತೆ ಸಂಬಂಧ; 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ವಿರುದ್ಧ ಪೋಕ್ಸೊ ಕೇಸ್!

ಕನ್ಯಾಕುಮಾರಿ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ 17 ವರ್ಷದ ಅಪ್ರಾಪ್ತ ಬಾಲಕನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಆರೋಪದ ಮೇಲೆ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯ ವಿರುದ್ಧ ಲಿಂಗ-ತಟಸ್ಥ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿದೆ.

ಬಾಲಕನ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಕೊಳಚೆಲ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಯುವತಿಯನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಎರಡನೇ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ಯುವತಿಗೆ ಸುಮಾರು ಒಂದು ವರ್ಷದ ಹಿಂದೆ ಇನ್‌ಸ್ಟಾಗ್ರಾಮ್ (Instagram) ಮೂಲಕ ಶಾಲೆ ಬಿಟ್ಟಿದ್ದ 17 ವರ್ಷದ ಬಾಲಕನ ಪರಿಚಯವಾಗಿತ್ತು. ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದು ನಿಯಮಿತವಾಗಿ ಭೇಟಿಯಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ನವೆಂಬರ್ 21ರಂದು ಯುವತಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು. ಈ ವೇಳೆ ಪರೀಕ್ಷೆ ನಡೆಸಿದ ವೈದ್ಯರು ಆಕೆ ಮೂರು ತಿಂಗಳ ಗರ್ಭಿಣಿ ಎಂದು ದೃಢಪಡಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಬಾಲಕನ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ನೀಡಿದ್ದಾರೆ. ಪೋಕ್ಸೊ ಕಾಯ್ದೆಯ ಪ್ರಕಾರ, ಲಿಂಗ ಭೇದವಿಲ್ಲದೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲರನ್ನೂ ಮಕ್ಕಳೆಂದೇ ಪರಿಗಣಿಸಲಾಗುತ್ತದೆ. ಅಲ್ಲದೆ, ಅಪ್ರಾಪ್ತ ವಯಸ್ಕರು ಲೈಂಗಿಕ ಚಟುವಟಿಕೆಗೆ ನೀಡುವ ಒಪ್ಪಿಗೆಗೆ ಕಾನೂನಿನಡಿ ಯಾವುದೇ ಮಾನ್ಯತೆ ಇರುವುದಿಲ್ಲ. ಹೀಗಾಗಿ 18 ವರ್ಷ ತುಂಬಿದ ಯುವತಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.