“ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ!”

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಕಾರ್ಯದರ್ಶಿ ಹಾಗೂ ರಾಜ್ಯ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಸೂರಜ್ ಹೆಗ್ಡೆ (55) ಅವರು ಭಾನುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ತಾಯಿ ಹಾಗೂ ಅಪಾರ ಸಂಖ್ಯೆಯ ಬಂಧು-ಮಿತ್ರರನ್ನು ಅಗಲಿದ್ದಾರೆ. ಸೂರಜ್ ಹೆಗ್ಡೆ ಅವರು ರಾಜ್ಯದ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ದಿ. ಡಿ. ದೇವರಾಜ ಅರಸು ಅವರ ಮೊಮ್ಮಗ (ಮಗಳ ಮಗ). ಭಾನುವಾರ ರಾತ್ರಿ ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಸೂರಜ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸೂರಜ್ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೇರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ತಮ್ಮ ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಈಗ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೂರಜ್ ಅಗಲಿಕೆಗೆ ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ