ಅಂಕೋಲಾ: ನಿಯಂತ್ರಣ ತಪ್ಪಿ ಉರುಳಿದ ಖಾಸಗಿ ಬಸ್; ಓರ್ವ ಪ್ರಯಾಣಿಕ ಸಾ*ವು, 20ಕ್ಕೂ ಹೆಚ್ಚು ಜನರಿಗೆ ಗಾಯ!

ಕಾರವಾರ: ಬಳ್ಳಾರಿಯಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಷ್ಟೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಓರ್ವ ಮೃತಪಟ್ಟು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರ ಅತ್ತೂರು ಕಂಚಿನ ಬಾಗಿಲಿನ ಸಮೀಪ ಶನಿವಾರ ಮುಂಜಾನೆ ಸಂಭವಿಸಿದೆ.
ಅಪಘಾತದ ವೇಳೆ ಬಸ್ ನಲ್ಲಿ ಒಟ್ಟು 36 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ತೀವ್ರವಾಗಿ ಗಾಯಗೊಂಡಿದ್ದ ಪ್ರಯಾಣಿಕರೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಆರು ಮಂದಿ ಪ್ರಯಾಣಿಕರನ್ನು ಕಾರವಾರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 15 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ವೀಪರ್ ಕೋಚ್ ಬಸ್ ಹೆದ್ದಾರಿಗೆ ಅಡ್ಡಲಾಗಿ ಉರುಳಿ ಬಿದ್ದಿದ್ದರಿಂದ ಯಲ್ಲಾಪುರ-ಅಂಕೋಲಾ ಮಾರ್ಗದಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ರಸ್ತೆಯ ಇಕ್ಕೆಲಗಳಲ್ಲಿ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ಪರದಾಡುವಂತಾಯಿತು.
ಘಟನಾ ಸ್ಥಳಕ್ಕೆ ಅಂಕೋಲಾ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಧಾವಿಸಿದ್ದು, ಕ್ರೇನ್ ಸಹಾಯದಿಂದ ಬಸ್ ಅನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
