ದರ್ಶನ್‌ಗೆ ಹಾಸಿಗೆ, ದಿಂಬು ಸೌಲಭ್ಯ: ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ; ಕೋರ್ಟ್ ಆದೇಶ ಕಾಯ್ದಿರಿಸಿದೆ

ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು 64ನೇ ಸಿಸಿಹೆಚ್ ನ್ಯಾಯಾಲಯ ಅ.9ಕ್ಕೆ ಕಾಯ್ದಿರಿಸಿದೆ.

ಕನಿಷ್ಟ ಸವಲತ್ತುಗಳನ್ನು ಒದಗಿಸಲು ಕೋರ್ಟ್ ಆದೇಶವಿದ್ದರೂ ಕೂಡ ಪರಪ್ಪನ ಅಗ್ರಹಾರ ಜೈಲಧಿಕಾರಿಗಳು ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ನಟ ದರ್ಶನ್ ಪರ ವಕೀಲರು ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಇಂದು (ಸೆ.30) ವಿಚಾರಣೆ ನಡೆಯಿತು.
ವಿಚಾರಣೆ ಸಂದರ್ಭದಲ್ಲಿ ಜೈಲ್ ಸೂಪರಿಂಟೆಂಡೆಂಟ್ ಸುರೇಶ್ ಕೂಡ ಹಾಜರಾಗಿದ್ದರು. ಈ ವೇಳೆ ಎಸ್ಪಿಪಿ ಪ್ರಸನ್ನಕುಮಾರ್ ಹಾಗೂ ದರ್ಶನ್ ಪರ ವಕೀಲ ಸುನೀಲ್ ಅವರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅ.9ಕ್ಕೆಆದೇಶವನ್ನು ಕಾಯ್ದಿರಿಸಿದೆ.
ಈ ಮೊದಲು ದರ್ಶನ್ ಪರ ವಕೀಲರು, ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನಾದರೂ ನೀಡಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದರು. ಅದರಂತೆ ನ್ಯಾಯಾಲಯವೂ ಕೂಡ ಕನಿಷ್ಠ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಿತ್ತು. ಆದರೆ ಜೈಲಧಿಕಾರಿಗಳು ಕೋರ್ಟ್ ಆದೇಶವನ್ನು ಪಾಲಿಸದೇ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅರ್ಜಿ ಸಲ್ಲಿಸಿದ್ದರು.