ಬಿಜೆಪಿ ಮಹಿಳಾ ಮುಖಂಡೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಬೆಂಗಳೂರು: ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಮಹಿಳೆಯೊಬ್ಬರು ಡೆತ್‌ನೋಟ್ ಬರೆದಿಟ್ಟು ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಸುಬೇದಾರಪಾಳ್ಯ ನಿವಾಸಿ ಮಂಜುಳಾ (42) ಆತ್ಮಹತ್ಯೆಗೆ ಶರಣಾದವರು.
ಮಂಜುಳಾ ಅವರ ಪತಿ ಇತ್ತೀಚೆಗೆ ಸಾವನ್ನಪ್ಪಿದ್ದರು. ಇವರಿಗೆ ಮಕ್ಕಳಿಲ್ಲ. ಹೀಗಾಗಿ ಸುಬೇದಾರಪಾಳ್ಯದಲ್ಲಿ ಒಂಟಿಯಾಗಿ ನೆಲೆಸಿದ್ದರು. ಸ್ಥಳೀಯವಾಗಿ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.
ಮಧ್ಯಾಹ್ನ ಸುಮಾರು 2 ಗಂಟೆಗೆ ಅಕ್ಕನ ಮಗಳು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಘಟನಾ ಸ್ಥಳದಲ್ಲಿ ಮರಣಪತ್ರ ಸಿಕ್ಕಿದೆ. ಅದರಲ್ಲಿ ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ. ಮರಣಪತ್ರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಜುಳಾ ತಮ್ಮ ಪತಿಯ ಸಾವಿನ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಹೀಗಾಗಿ ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಯಶವಂತಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.