ಮಂಗಳೂರು ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟದಲ್ಲಿ ಇಬ್ಬರು ಬಂಧಿತ

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿ 23 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಗುಲ್ಬರ್ಗಾ ಜಿಲ್ಲೆಯ ಉಮ್ಮರ್ ಕಾಲೊನಿ ನಿವಾಸಿ ಶೇಕ್ ಸಿಕಂದರ್(22) ಹಾಗೂ ಮಂಗಳೂರಿನ ಕೆಂಜಾರು ನಿವಾಸಿ ಮೊಹಮ್ಮದ್ ತೌಫೀಕ್(29) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಅವರಲ್ಲಿದ್ದ ರೂ. 1,15,000/- ಮೌಲ್ಯದ 23 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 2 ಮೊಬೈಲ್ ಫೋನ್ ಗಳು, ಸುಝುಕಿ ಸ್ಕೂಟರ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸರಿಸುಮಾರು ರೂ. 2,10,000/- ಮೌಲ್ಯದ ಸೊತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಶೇಕ್ ಸಿಕಂದರ್ ಎಂಬಾತನು ಮಾದಕ ವಸ್ತುವಾದ ಎಂಡಿಎಂಎ ನ್ನು ಮುಂಬೈಯಿಂದ ಖರೀದಿಸಿಕೊಂಡು ಗುಲ್ಬರ್ಗದಿಂದ ಬಸ್ಸಿನಲ್ಲಿ ಮಂಗಳೂರಿಗೆ ಬಂದು ಇನ್ನೋರ್ವ ಆರೋಪಿ ಮೊಹಮ್ಮದ್ ತೌಫೀಕ್ ಎಂಬಾತನಿಗೆ ಮಾರಾಟ ಮಾಡುತ್ತಿದ್ದು, ಮೊಹಮ್ಮದ್ ತೌಫೀಕ್ ನು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ.
ಈ ಘಟನೆ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾದಕ ವಸ್ತು ಎಂಡಿಎಂಎ ಮಾರಾಟದ ಪತ್ತೆ ಕಾರ್ಯವನ್ನು ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ರವರ ನೇತೃತ್ವದಲ್ಲಿ ಪಿಎಸ್ಐ ಶರಣಪ್ಪ ಭಂಡಾರಿ, ಎಎಸ್ಐ ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.