ಚಿಕ್ಕಮಗಳೂರು: ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕ ಗುಂಡು ತಗುಲಿ ಯುವಕ ಸಾ*ವು – ಮೂವರು ವಶಕ್ಕೆ!

ಚಿಕ್ಕಮಗಳೂರು: ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಕಡೇಮನೆ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಕಡೇಮನೆ ಗ್ರಾಮದ ಚೇತನ್ (26) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಏಳು ಮಂದಿ ಸ್ನೇಹಿತರು ಶಿಕಾರಿಗೆ ತೆರಳಿದ್ದರು ಎನ್ನಲಾಗಿದೆ. ಶಿಕಾರಿ ವೇಳೆ ಕತ್ತಲಿನಲ್ಲಿ ಆಕಸ್ಮಿಕವಾಗಿ ಗುಂಡು ತಗುಲಿ ಚೇತನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಜೊತೆಗಿದ್ದ ಸ್ನೇಹಿತರು ಚೇತನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಬಳಿಕ ಚೇತನ್ ಅವರನ್ನು ಆಸ್ಪತ್ರೆಗೆ ಕರೆತಂದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶಿಕಾರಿಗೆ ತೆರಳಿದ್ದ ಏಳು ಮಂದಿಯಲ್ಲಿ ಮೂವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
