ಸಾಲ ಮನ್ನಾ ವಿಚಾರದಲ್ಲಿ ಸಿಹಿಸುದ್ದಿ ನೀಡುವ ಭರವಸೆ; ಬೆಳೆಹಾನಿ ಪರಿಶೀಲಿಸಿ ಪರಿಹಾರ ವಿತರಣೆಗೆ ಕ್ರಮ

ಬೆಂಗಳೂರು: ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಲು ಮುಂದಾಗಿದೆ. ಬೆಳೆ ಹಾನಿ ಹಿನ್ನೆಲೆಯಲ್ಲಿ ರೈತರು ಸಾಲ ಮನ್ನಾ ಮಾಡುವಂತೆ ಕೇಳುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ಅತಿವೃಷ್ಟಿ ಪೀಡಿತ ಪ್ರದೇಶಗಳ ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ, ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಬೇಕು. ಮಾನವ- ಜಾನುವಾರು ಜೀವ ಹಾನಿಗಳಿಗೆ ಶೇ.100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಬೇಕು. ಕಳೆದ ಬಾರಿಗಿಂತ ಈ ಬಾರಿ ಉತ್ತಮ ಮಳೆ ಆಗಿದೆ. ವಾಡಿಕೆಗಿಂತ ಶೇ17 ರಷ್ಟು ಮಳೆ ಹೆಚ್ಚಾಗಿದೆ. 37 ಜನರ ಜೀವ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲಾ ಪರಿಹಾರ ನೀಡಲಾಗಿದೆ.

175 ಜಾನುವಾರುಗಳ ಪ್ರಾಣ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲದಕ್ಕೂ ಪರಿಹಾರ ನೀಡಲಾಗಿದೆ. ಸಂಪೂರ್ಣ ಮನೆ ಹಾನಿ, ಭಾಗಶಃ ಹಾನಿ ಆಗಿರುವ ಎಲ್ಲಾ ಪ್ರಕರಣಗಳಲ್ಲೂ ಪರಿಹಾರ ನೀಡಲಾಗಿದೆ. ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಸಂಭವಿಸಿದೆ. ನಿರಂತರ ಜೋಳು ಮಳೆ ಇರುವುದರಿಂದ ಬೆಳೆ ಹಾನಿಯ ಸಂಪೂರ್ಣ ಜಂಟಿ ಸಮೀಕ್ಷೆಗೆ ಅಡ್ಡಿ ಆಗುತ್ತಿದೆ. ಹೀಗಾಗಿ ನಿಗಧಿತ ಅವಧಿಯೊಳಗೆ ಜಂಟಿ ಸಮೀಕ್ಷೆ ಪೂರ್ಣಗೊಂಡಿಲ್ಲ. ಆದಷ್ಟು ಶೀಘ್ರ ಸಮೀಕ್ಷೆ ಮುಗಿಸಿ, ಪರಿಹಾರ ವಿತರಣೆ ಮಾಡಲಾಗುವುದು.
ನಮ್ಮ ಸರ್ಕಾರವು ಉದ್ಯೋಗಾಧಾರಿತ ಶಿಕ್ಷಣಕ್ಕೆ ಅತಿ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಜಿಟಿಟಿಸಿ ಬಹು-ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ವಿಟಿಯು ಸಹಯೋಗದೊಂದಿಗೆ ಕೊಪ್ಪಳ ಜಿಲ್ಲೆಯ ತಳಕಲ್ಲ ಮತ್ತು ಕಲಬುರಗಿಯಲ್ಲಿ ತಲಾ 120 ಕೋಟಿ ರೂ.ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. 60 ಕೋಟಿ ರೂ. ವೆಚ್ಚದಲ್ಲಿ ಕಂಪ್ಲಿ, ರಾಯಚೂರು, ಸಿಂಧನೂರ ಮತ್ತು ಜೇವರ್ಗಿ ತಾಲೂಕುಗಳಲ್ಲಿ ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುತ್ತಿದ್ದೇವೆ. ಕಲಬುರಗಿ ಜಿಲ್ಲೆಯ ಸೇಡಂನಲ್ಲಿರುವ ಸರ್ಕಾರಿ ಐಟಿಐಯನ್ನು 25 ಕೋಟಿ ರೂ. ಅನುದಾನದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಉನ್ನತೀಕರಿಸುತ್ತಿದ್ದೇವೆ.
ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಬೆಳವಣಿಗೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ/ ತಾರಾಲಯಗಳನ್ನು ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ. ಕಲಬುರಗಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಲಾಗುತ್ತಿದ್ದು, ಒಟ್ಟಾರೆ 390 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿ ಜವಳಿ ಪಾರ್ಕಿಗೆ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ. ಇದರಿಂದ 1 ಲಕ್ಷ ಜನರಿಗೆ ನೇರ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗುವ ನಿರೀಕ್ಷೆಯಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಒಎಸ್‌ಡಿಎ ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುತ್ತಿದೆ. ಪ್ರತಿ ವರ್ಷ 2,500 ಅಭ್ಯರ್ಥಿಗಳಿಗೆ ಉದ್ಯೋಗಾಧಾರಿತ ವಸತಿ ಸಹಿತ ಕೌಶಲ್ಯ ತರಬೇತಿ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
