ಮುಂದಿನ 7 ದಿನ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ 7 ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 24ರಿಂದ 30ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದೆ. ವಿಶೇಷವಾಗಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೇ 25ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

ಮೇ 24ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಬೀಸಲಿದ್ದು, ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಉತ್ತರ ಒಳನಾಡಿನ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಇದೇ ವೇಳೆ ಉತ್ತರ ಒಳನಾಡಿನ ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಭಾರಿ ಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇರುವುದರಿಂದ ರೈತರು ಹಾಗೂ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹಾಗೂ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.