ಜಾರ್ಖಂಡ್ :ಉಕ್ಕಿನ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಮೂವರು ಕಾರ್ಮಿಕರು ದಾರುಣ ಸಾ*ವು!

ಜಾರ್ಖಂಡ್ : ರಾಮಗಢ ಜಿಲ್ಲೆಯ ಉಕ್ಕಿನ ಕಾರ್ಖಾನೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಉದ್ಯೋಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹೆಲಾಲ್‌ನಲ್ಲಿರುವ ಮಾ ಚಿನ್ನಮಾಸ್ತಿಕ ಇಸ್ಪತ್ ಉಕ್ಕಿನ ಕಾರ್ಖಾನೆಯ ಕ್ಯಾಪ್ಟಿವ್ ಪವರ್ ಪ್ಲಾಂಟ್‌ನಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ವ್ಯಾಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿ ಅವಘಡದಲ್ಲಿ ಕನಿಷ್ಠ ನಾಲ್ವರು ಉದ್ಯೋಗಿಗಳಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಅವರಲ್ಲಿ ಸಂಜೀವ್, ವಿನಿತ್ ಮತ್ತು ಅಭಿಷೇಕ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳುವಿಗೆ ಚಿಕಿತ್ಸೆ ಮುಂದುವರಿದಿದೆ.
ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಗ್ನಿ ಅವಘಡದ ಕಾರಣ ಪತ್ತೆಹಚ್ಚಲು ತನಿಖೆ ಆರಂಭವಾಗಿದ್ದು, ಕಾರ್ಖಾನೆ ಇನ್ಸ್‌ಪೆಕ್ಟರ್ ಹಾಗೂ ಛೋಟಾನಾಗಪುರ ಉಪ ಮುಖ್ಯ ಇನ್ಸ್‌ಪೆಕ್ಟರ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಘಟನೆ ನಡೆದ ಸಂದರ್ಭದಲ್ಲಿ ಕಾರ್ಖಾನೆಯಲ್ಲಿ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಇದ್ದರು ಎನ್ನಲಾಗಿದೆ.
