ಕಾಪು ಫ್ಲೈಓವರ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಒಂದೂವರೆ ವರ್ಷದ ಹಸುಗೂಸು ಸಾವು!

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಫ್ಲೈಓವರ್ ಮೇಲಿನ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಒಂದೂವರೆ ವರ್ಷದ ಹಸುಗೂಸು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಉಚ್ಚಿಲ ನಿವಾಸಿ ಸಂಧ್ಯಾ ಅವರ ಪುತ್ರ ಸುವಿತ್ (1.5 ವರ್ಷ) ಮೃತಪಟ್ಟ ದುರ್ದೈವಿ.

ಉಚ್ಚಿಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ, ರಸ್ತೆ ಬದಿಯಲ್ಲಿ ಸ್ಥಾಪಿಸಲಾಗಿದ್ದ ಬ್ಯಾನರ್ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಕಾಪು ಪುರಸಭೆಗೆ ಸೇರಿದ ಟೆಂಪೋಗೆ ಹಿಂಬದಿಯಿಂದ ಶಕ್ತಿಶಾಲಿಯಾಗಿ ಢಿಕ್ಕಿ ಹೊಡೆದಿತ್ತು. ಈ ಅಪಘಾತದ ತೀವ್ರತೆಗೆ ರಿಕ್ಷಾದಲ್ಲಿದ್ದ ಉಚ್ಚಿಲ ನಿವಾಸಿ ಸಂಧ್ಯಾ ಹಾಗೂ ಅವರ ಮಕ್ಕಳಾದ ಗಯಾನ್ ಮತ್ತು ಸುವಿತ್ ಗಾಯಗೊಂಡಿದ್ದರು.
ಗಾಯಾಳುಗಳ ಪೈಕಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಒಂದೂವರೆ ವರ್ಷದ ಮಗು ಸುವಿತ್ನನ್ನು ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮಗು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.