ಕೇರಳ: ಕೊಟ್ಟಾಯಂನಲ್ಲಿ ಬಾಡಿಗೆ ಮನೆಯಲ್ಲಿ ದಂಪತಿ ಶವ ಪತ್ತೆ; ಆತ್ಮಹತ್ಯೆ ಶಂಕೆ!
ಕೊಟ್ಟಾಯಂ : ಕೇರಳದ ಕೊಟ್ಟಾಯಂ ಜಿಲ್ಲೆಯ ಎರಟ್ಟುಪೆಟ್ಟಾ ಬಳಿಯ ಬಾಡಿಗೆ ಮನೆಯೊಂದರಲ್ಲಿ ದಂಪತಿಯ ಮೃತದೇಹ ಪತ್ತೆಯಾಗಿದೆ. ಪ್ರಾಥಮಿಕವಾಗಿ ಇದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತರನ್ನು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ರಶ್ಮಿ(35) ಮತ್ತು ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಪತಿ ವಿಷ್ಣು(36) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂಪತಿ ಕಳೆದ ಆರು ತಿಂಗಳಿನಿಂದ ಪನಯಪ್ಪಲಂನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ವಿಷ್ಣುವಿನ ತಾಯಿ ಫೋನ್ ಮೂಲಕ ದಂಪತಿಯನ್ನು ಸಂಪರ್ಕಿಸಲು ಪ್ರಯತ್ನಿಸಿದ್ದರು. ಆದರೆ ಸಾಧ್ಯವಾಗಿರಲಿಲ್ಲ. ನೆರೆಹೊರೆಯವರು ನಂತರ ಮನೆಗೆ ಬಂದು ಪರಿಶೀಲನೆ ನಡೆಸಿದಾಗ ದಂಪತಿಯ ಮೃತದೇಹ ಪತ್ತೆಯಾಗಿದೆ. ಮೃತದೇಹದ ಕೈಯನ್ನು ಟೇಪ್ನಿಂದ ಕಟ್ಟಿ ಹಾಕಿರುವುದು ಕಂಡು ಬಂದಿತ್ತು.
ʼಪ್ರಾಥಮಿಕವಾಗಿ ಆತ್ಮಹತ್ಯೆಯೆಂದು ಶಂಕಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆʼ ಎಂದು ಪೊಲೀಸರು ತಿಳಿಸಿದ್ದಾರೆ.
