ಕೊಪ್ಪಳ: ಮಂತ್ರಾಲಯಕ್ಕೆ ತೆರಳುತ್ತಿದ್ದವರ ಮೇಲೆ ಲಾರಿ ಹರಿದು 4 ಸಾ*ವು; 6 ಮಂದಿ ಗಂಭೀರ!

ಕೊಪ್ಪಳ : ಕುಕನೂರು ತಾಲೂಕಿನ ಭಾನಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಹಾಗೂ ಪ್ರವೀಣ್ (23) ಮೃತಪಟ್ಟ ದುರ್ದೈವಿಗಳು. ಇವರೆಲ್ಲರೂ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ಓಮಿನಿ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಮಂತ್ರಾಲಯಕ್ಕೆ ಭಾನಾಪುರ ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ಪಕ್ಕದ ರಸ್ತೆಯಿಂದ ಅತಿ ವೇಗವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ದಾಟಿದ ಲಾರಿ, ಎದುರು ದಿಕ್ಕಿನಿಂದ ಬರುತ್ತಿದ್ದ ಓಮಿನಿ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭೀಕರತೆಗೆ ಓಮಿನಿ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದ ಭೀಕರತೆ ಕಂಡು ಸ್ಥಳೀಯರು ಕಂಗಾಲಾಗಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಕುಕನೂರು ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದರು. ವಾಹನದಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆದು ತಕ್ಷಣವೇ ಕೊಪ್ಪಳ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡ ಆರು ಜನರಲ್ಲಿ ಇಬ್ಬರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುಕನೂರು ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಚಾಲನೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ