ಮಂಗಳೂರು ಹೊರವಲಯದಲ್ಲಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ: ಹೆದ್ದಾರಿಯಲ್ಲಿ ಆತಂಕ

ಮಂಗಳೂರು ನವೆಂಬರ್ 07: ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾರ್ ಕಣ್ಣೂರು ಬಳಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಭಾರಿ ಅನಾಹುತವೊಂದು ತಪ್ಪಿದೆ.

ಗ್ಯಾಸ್ ಸಿಲಿಂಡರ್ಗಳನ್ನು ತುಂಬಿಕೊಂಡು ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಲಾರಿ, ಅಡ್ಯಾರ್ ಕಣ್ಣೂರಿನ ಮಸೀದಿ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ, ಮುನ್ನೆಚ್ಚರಿಕಾ ಕ್ರಮವಾಗಿ ತಕ್ಷಣವೇ ಭದ್ರತಾ ಕಾರ್ಯಾಚರಣೆ ನಡೆಸಿದರು. ಹೆದ್ದಾರಿಯಲ್ಲೇ ಲಾರಿ ಪಲ್ಟಿಯಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಮಂಗಳೂರು ಸಂಚಾರ ಪೊಲೀಸರು ಪರ್ಯಾಯ ರಸ್ತೆಗಳ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.