₹50 ಸಾವಿರ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು!

ಮಂಗಳೂರು: 50 ಸಾವಿರ ರೂ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ದಕ್ಷಿಣ ಕನ್ನಡ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿಯನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ. ಈ ಕುರಿತು ವಿಜಯ ಕರ್ನಾಟಕದಲ್ಲಿ ತನಿಖಾ ವರದಿ ಪ್ರಕಟವಾಗಿತ್ತು.

ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಇದೀಗ ಕೃಷ್ಣವೇಣಿ ಸ್ಥಾನಕ್ಕೆ ಸಂದೀಪ್ ಜಿ.ಯು. ಅವರನ್ನು ನಿಯೋಜಿಸಲಾಗಿದೆ.
50 ಸಾವಿರ ರೂ. ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಂಧನಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ, ಹಿರಿಯ ಭೂವಿಜ್ಞಾನಿ ಕೃಷ್ಣವೇಣಿಯನ್ನು ಅಮಾನತುಗೊಳಿಸಿ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಶನಿವಾರ ಮಹತ್ವದ ಆದೇಶ ಹೊರಡಿಸಿದ್ದಾರೆ.
ಜಾಗದ ವಿಚಾರಕ್ಕೆ ಸಂಬಂಧಿಸಿ 2025ರ ಮೇ 28ರಂದು ಲಂಚದ ಹಣ ಪಡೆಯುತ್ತಿದ್ದಾಗ ಕೃಷ್ಣ ವೇಣಿಯನ್ನು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದರು. ಕೃಷ್ಣವೇಣಿ ಸುಮಾರು 18 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದರು. ಈ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಗಣಿ ಇಲಾಖೆ ನಿರ್ದೇಶಕರು ಸರಕಾರಕ್ಕೆ ಶಿಫಾರಸು ಮಾಡಿದ್ದರು. ಈ ಮಧ್ಯೆ ಆರೋಪಿಯು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿ, ಆ ಮೂಲಕ ಜಾಮೀನು ಪಡೆದಿದ್ದರು. ಇದಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಅದೇ ಹುದ್ದೆಯಲ್ಲಿ ಮುಂದುವರೆದಿದ್ದರು.

ಗಣಿ ಇಲಾಖೆ ಅಧಿಕಾರಿ ಕೃಷ್ಣವೇಣಿ ಅದೇ ಹುದ್ದೆಯಲ್ಲಿ ಮುಂದುವರಿದಿರುವ ಬಗ್ಗೆ ಮಾಧ್ಯಮದ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಯನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಿ, ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.
ಕೃಷ್ಣವೇಣಿ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಮೇ 28ರಿಂದ ಅನ್ವಯವಾಗುವಂತೆ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10 (2)(ಎ)ರನ್ವಯ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಸರಕಾರದ ಅಧೀನ ಕಾರ್ಯದರ್ಶಿ ಮಂಜುನಾಥ ಎಚ್.ಎಂ. ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಗಣಿ ಮತ್ತು ಭೂವಿಜ್ಞಾನ ಇಲಾಖೆ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿಯನ್ನು ರಾಜ್ಯ ಸರಕಾರ ಅಮಾನತುಗೊಳಿಸಿದ್ದು, ಅವರ ಸ್ಥಾನಕ್ಕೆ ಉಡುಪಿ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು. ಅವರನ್ನು ಕರ್ನಾಟಕ ನಾಗರಿಕ ಸೇವಾ ನಿಯಮ-68ರಡಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಧೀನ ಕಾರ್ಯದರ್ಶಿ ಮಂಜುನಾಥ್ ಎಚ್. ಆದೇಶಿಸಿದ್ದಾರೆ.