ಕಪಿಲ್ ನಿಧನರಾದ ದಿನ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಚಿತ್ರೀಕರಣವೇ ನಡೆದಿಲ್ಲ-ಹೊಂಬಾಳೆ ಫಿಲ್ಮ್ಸ್ ಸ್ಪಷ್ಟನೆ

ಉಡುಪಿ :ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ಆರ್ಟಿಸ್ಟ್ ಕಪಿಲ್ ಎಂಬುವವರ ನಿಧನದ ಬಗ್ಗೆ ಒಂದಷ್ಟು ಸುದ್ದಿಗಳು ಹರಡಿವೆ. ಈ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಕಪಿಲ್ ನಿಧರಾದರು ಎಂದು ಕೆಲವೆಡೆ ವರದಿ ಆಯಿತು. ಈ ಘಟನೆಗೆ ಸಂಬಂಧಿಸಿದಂತೆ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ಸ್ಪಷ್ಟನೆ ನೀಡಿದೆ. ಕಪಿಲ್ ನಿಧನರಾದ ದಿನ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಚಿತ್ರೀಕರಣವೇ ನಡೆದಿಲ್ಲ ಎಂದು ನಿರ್ಮಾಪಕರು ಸ್ಪಷ್ಟಪಡಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದು, ಮುಖ್ಯ ಭೂಮಿಕೆಯಲ್ಲೂ ನಟಿಸುತ್ತಿದ್ದಾರೆ.
ಎಂ.ಎಫ್. ಕಪಿಲ್ ಅವರ ನಿಧನಕ್ಕೆ ನಮ್ಮ ಆಗಾದವಾದ ಸಂತಾಪಗಳು. ಅವರ ಕುಟುಂಬಕ್ಕೆ ಮತ್ತು ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮೆಲ್ಲರ ಸಹಾನುಭೂತಿ ಅವರೊಂದಿಗಿದೆ. ಈ ಹಿನ್ನೆಲೆಯಲ್ಲಿ, ಈ ಘಟನೆ ಕಾಂತಾರ ಚಿತ್ರೀಕರಣದ ಸ್ಥಳದಲ್ಲಿ ಸಂಭವಿಸಿಲ್ಲ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ’ ಎಂದು ನಿರ್ಮಾಣ ಸಂಸ್ಥೆ ತಿಳಿಸಿದೆ.
ಆ ದಿನ ಯಾವುದೇ ಚಿತ್ರೀಕರಣ ನಿಗದಿಯಾಗಿರಲಿಲ್ಲ ಮತ್ತು ಈ ಘಟನೆ ಅವರ ವೈಯಕ್ತಿಕ ಕಾರ್ಯಕ್ರಮದಲ್ಲಿ, ಚಲನಚಿತ್ರ ಸಂಬಂಧಿತ ಚಟುವಟಿಕೆಗಳ ವ್ಯಾಪ್ತಿಯ ಹೊರಗೆ ಸಂಭವಿಸಿದೆ. ದಯವಿಟ್ಟು ಈ ಘಟನೆಯನ್ನು ಕಾಂತಾರ ಚಿತ್ರ ಅಥವಾ ಅದರ ಸಿಬ್ಬಂದಿಯೊಂದಿಗೆ ಯಾವುದೇ ಸಂಬಂಧವನ್ನು ಕಲ್ಪಿಸಬಾರದು ಎಂದು ನಾವು ವಿನಂತಿಸುತ್ತೇವೆ’ ಎಂದು ಪತ್ರದ ಮೂಲಕ ‘ಹೊಂಬಾಳೆ ಫಿಲ್ಸ್ಮ್’ ಸ್ಪಷ್ಟನೆ ನೀಡಿದೆ.