ಕೋವಿಡ್ ಲಸಿಕೆ-ಹೃದಯಾಘಾತ ಸಂಬಂಧವಿಲ್ಲ: ಐಸಿಎಂಆರ್ ಅಧ್ಯಯನದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಸ್ಪಷ್ಟನೆ

ನವದೆಹಲಿ : ಹಠಾತ್ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣ ಅಲ್ಲ ಎಂದು ಕೇಂದ್ರ ಸರಕಾರ ತಿಳಿಸಿದೆ. ಐಸಿಎಂಆರ್ ಮತ್ತು ಏಮ್ಸ್ ನಡೆಸಿದ ವ್ಯಾಪಕ ಅಧ್ಯಯನಗಳಲ್ಲಿ ಕೋವಿಡ್ ಲಸಿಕೆಗಳು ಮತ್ತು ಹೃದಯಾಘಾತದಿಂದ ಸಂಭವಿಸುತ್ತಿರುವ ಹಠಾತ್ ಸಾವುಗಳ ನಡುವೆ ಯಾವುದೇ ಸಂಬಂಧವಿಲ್ಲ ಎಂಬುದಾಗಿ ನಿರ್ಣಾಯಕ ವರದಿ ನೀಡಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಹೇಳಿದೆ.

ಕರ್ನಾಟಕದ ಹಾಸನದಲ್ಲಿ ಹಠಾತ್ ಹೃದಯಾಘಾತದಿಂದ ಹಲವಾರು ಜನ ಸಾವನಪ್ಪಿದ ಬೆನ್ನಲ್ಲೇ , ರಾಜ್ಯ ಸರಕಾರ ಪರಿಶೀಲನೆಗೆ ಸಮಿತಿ ರಚಿಸಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ ತುರಾತುರಿಯಲ್ಲಿ ಕೊರೊನಾ ಲಸಿಕೆಗೆ ಅಧಿಕೃತ ಅನುಮೋದನೆ ಕೊಟ್ಟು, ಜನರಿಗೆ ಹಂಚಿದ್ದು ಕೂಡ ಈ ಸಾವುಗಳಿಗೆ ಕಾರಣವಿರಬಹುದು ಎಂಬುದನ್ನು ಅಲ್ಲಗಳೆಯಲಾಗದು, ಕಾರಣ ವಿಶ್ವದ ಅನೇಕ ಅಧ್ಯಯನಗಳು ಇತ್ತೀಚೆಗೆ ಹೆಚ್ಚಾಗಿರುವ ಹೃದಯ ಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣ ಎಂಬುದನ್ನು ಹೇಳಿವೆ. ಈ ವಿಚಾರದಲ್ಲಿ ಬಿಜೆಪಿಯವರು ನಮ್ಮನ್ನು ಟೀಕಿಸುವ ಮುನ್ನ ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಲಿ ಎಂದು ಟೀಕಿಸಿದ್ದರು. ಇದರ ಬೆನ್ನಲ್ಲೇ ಕೇಂದ್ರದ ಆರೋಗ್ಯ ಸಚಿವಾಲಯ ಈ ಹೇಳಿಕೆ ಬಿಡುಗಡೆ ಮಾಡಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್‌ಸಿಡಿಸಿ) ನಡೆಸಿದ ಅಧ್ಯಯನಗಳು ಭಾರತದಲ್ಲಿ ಕೋವಿಡ್ ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸುತ್ತವೆ. ಅಲ್ಲದೆ, ಗಂಭೀರ ಅಡ್ಡಪರಿಣಾಮಗಳ ಅಪರೂಪದ ಪ್ರಕರಣಗಳಿವೆ ಎಂದು ಅದು ಹೇಳಿವೆ ಎಂದು ಸಚಿವಾಲಯ ತಿಳಿಸಿದೆ.
ಹಠಾತ್ ಹೃದಯಾಘಾತದ ಸಾವುಗಳು ಅನುವಂಶೀಯತೆ, ಜೀವನಶೈಲಿ ಮತ್ತು ಕೋವಿಡ್ ನಂತರದ ತೊಡಕುಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಅಂಶಗಳಿಂದ ಉಂಟಾಗಬಹುದು ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ವಿಶೇಷವಾಗಿ 18 ರಿಂದ 45 ವರ್ಷ ವಯಸ್ಸಿನವರು ಹಠಾತ್ ಹೃದಯಾಘಾತಕ್ಕೆ ತುತ್ತಾಗಿ ಸಾವಿಗೀಡಾಗುತ್ತಿರುವ ಕುರಿತ ಹಿಂದಿನ ಕಾರಣಗಳನ್ನು ಪತ್ತೆ ಮಾಡಲು ಐಸಿಎಂಆರ್ ಮತ್ತು ಎನ್‌ಸಿಡಿಸಿ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಅದು ಹೇಳಿದೆ.ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
