ಆಲಿಗಢ ವಿವಿ ಕ್ಯಾಂಪಸ್‌ನಲ್ಲಿ ಅಧ್ಯಾಪಕನ ಗುಂಡಿಕ್ಕಿ ಹತ್ಯೆ

ಆಲಿಗಢ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಆಲಿಗಢದಲ್ಲಿನ ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (AMU) ಕ್ಯಾಂಪಸ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಅಧ್ಯಾಪಕನಿಗೆ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.

ಮೃತರನ್ನು ಎಬಿಕೆ ಶಾಲೆಯ ಅಧ್ಯಾಪಕ ರಾವ್ ದಾನಿಶ್ ಅಲಿ (43) ಎಂದು ಗುರುತಿಸಲಾಗಿದೆ. ಇವರು ಕಳೆದ 11 ವರ್ಷಗಳಿಂದ ಶಾಲೆಯಲ್ಲಿ ಗುತ್ತಿಗೆ ಆಧಾರಿತ ಕಂಪ್ಯೂಟರ್ ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಬುಧವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ದಾನಿಶ್ ಅಲಿ ಅವರು ತಮ್ಮ ಸಹೋದ್ಯೋಗಿಗಳೊಂದಿಗೆ ಮೌಲಾನಾ ಆಜಾದ್ ಲೈಬ್ರರಿಯ ಹಿಂಭಾಗದ ಕ್ಯಾಂಟೀನ್ ಬಳಿ ಸಂಜೆ ನಡಿಗೆಯಲ್ಲಿ ತೊಡಗಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಮುಖವಾಡಧಾರಿ ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ದಾಳಿಕೋರರು ಹಾರಿಸಿದ ಗುಂಡು ದಾನಿಶ್ ಅವರ ತಲೆಗೆ ತಗುಲಿದ್ದು, ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಘಟನೆ ನಡೆದ ತಕ್ಷಣ ಆಲಿಗಢ ಎಸ್‌ಎಸ್‌ಪಿ ನೀರಜ್ ಜದೋನ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಹಂತಕರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
ಮೃತ ದಾನಿಶ್ ಅಲಿ ಅವರು ಮಾಜಿ ಶಾಸಕರೊಬ್ಬರ ಅಳಿಯ ಎಂದು ಹೇಳಲಾಗುತ್ತಿದ್ದು, ಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ವಿಶ್ವವಿದ್ಯಾಲಯದ ಕ್ಯಾಂಪಸ್‌ನೊಳಗೆ ಈ ಕೃತ್ಯ ನಡೆದಿರುವುದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದಲ್ಲಿ ಆತಂಕ ಮೂಡಿಸಿದೆ.