ರಾಜಸ್ಥಾನ: ಎಕ್ಸ್‌ಪ್ರೆಸ್‌ವೇನಲ್ಲಿ ಬಸ್-ಟ್ರೇಲರ್ ಅಪಘಾತ; ಬೆಂಕಿಗಾಹುತಿಯಾಗಿ 7 ಮಂದಿ ಸಾ*ವು!

ದೌಸಾ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಹರಿದ್ವಾರದಿಂದ ಇಂದೋರ್‌ಗೆ ತೆರಳುತ್ತಿದ್ದ ಖಾಸಗಿ ಬನ್ನೊಂದು ದಿಲ್ಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರೇಲರ್‌ಗೆ ಢಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಪರಿಣಾಮ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ರಾತ್ರಿ 2ರಿಂದ 3 ಗಂಟೆಯ ನಡುವಿನ ಅವಧಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿದ್ದ ಹೆಚ್ಚಿನ ಪ್ರಯಾಣಿಕರು ನಿದ್ರೆಯಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಢಿಕ್ಕಿಯ ತೀವ್ರತೆಗೆ ಬಸ್‌ನ ಮೇಲಿನ ಬರ್ತ್‌ಗಳಲ್ಲಿ ಮಲಗಿದ್ದ ಹಲವು ಪ್ರಯಾಣಿಕರು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಟ್ರೇಲರ್ಗೆಗೆ ಢಿಕ್ಕಿ ಹೊಡೆದ ಕೆಲವೇ ಕ್ಷಣಗಳಲ್ಲಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೆಲ ಪ್ರಯಾಣಿಕರು ಬೆಂಕಿ ವ್ಯಾಪಿಸುವ ಮುನ್ನವೇ ಬಸ್‌ನಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿವೆ. ಸ್ಥಳೀಯ ನಿವಾಸಿಗಳ ಸಹಕಾರದೊಂದಿಗೆ ಗಾಯಾಳುಗಳನ್ನು ರಕ್ಷಿಸಿ ದೌಸಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಟ್ರೇಲರ್‌ಗೆ ಢಿಕ್ಕಿ ಹೊಡೆದ ಬಳಿಕ ಬಸ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.