ಶ್ರೀನಗರ: ಬುಡ್ಗಾಮ್ನಲ್ಲಿ 12 ವರ್ಷದ ಬಾಲಕಿಯ ಭೀಕರ ಅತ್ಯಾಚಾ*ರ, ಕೊಲೆ; ಕಣಿವೆ ರಾಜ್ಯದಲ್ಲಿ ಭಾರಿ ಆಕ್ರೋಶ!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುಡ್ಡಾಮ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಘೋರ ಕೃತ್ಯದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ರಾಜಕೀಯ ಪಕ್ಷಗಳು ಮತ್ತು ಧಾರ್ಮಿಕ ಮುಖಂಡರು ಒತ್ತಾಯಿಸಿದ್ದಾರೆ.
ಶನಿವಾರ ರಾತ್ರಿ 10 ಗಂಟೆಗೆ ಬುಡ್ಗಾಮ್ ಪೊಲೀಸ್ ಠಾಣೆಗೆ 12 ವರ್ಷದ ಬಾಲಕಿ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸಂಜೆ ವೇಳೆ ಆಕೆ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು.
ಈ ಕುರಿತು ಮಾಹಿತಿ ದೊರೆತಂತೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಶೋಧ ಕಾರ್ಯಾಚರಣೆ ಆರಂಭಿಸಿದರು. ಸೋಮವಾರ ಬೆಳಗಿನ ಜಾವ, ಬಾಲಕಿಯ ಮೃತದೇಹ ಆಕೆಯ ಮನೆಯಿಂದ ಸ್ವಲ್ಪ ದೂರದಲ್ಲಿ ಪತ್ತೆಯಾಗಿದೆ.

ಈ ಘಟನೆಯು ಆ ಪ್ರದೇಶದ ಜನರಲ್ಲಿ ಆಘಾತವನ್ನುಂಟು ಮಾಡಿದೆ.
ಈ ಕುರಿತು ಪ್ರತಿಕ್ರಿಯಿಸಿದ ಬುಡ್ಯಾಮ್ ಎಸ್ಎಸ್ಪಿ ಹರಿಪ್ರಸಾದ್ ಕೆ ಕೆ ಅಪ್ರಾಪ್ತ ಬಾಲಕಿಯ ಮೃತದೇಹ ಆಕೆಯ ನಿವಾಸದಿಂದ 200 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಅಗತ್ಯವಿರುವ ಎಲ್ಲಾ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಈ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ. ಪ್ರಾಥಮಿಕವಾಗಿ ಇದು ಅತ್ಯಾಚಾರ ಮತ್ತು ಕೊಲೆ ಪ್ರಕರಣವೆಂದು ಕಂಡು ಬರುತ್ತದೆ. ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ)ವನ್ನು ರಚಿಸಲಾಗಿದೆ. ಈ ಕುರಿತು ನ್ಯಾಯಯುತ ತನಿಖೆಯನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.
ಸಂತ್ರಸ್ತೆಯ ಪೋಟೊ ಬಹಿರಂಗಪಡಿಸದಂತೆ ಪೊಲೀಸರು ಮಾಧ್ಯಮಗಳು ಮತ್ತು ಸಾರ್ವಜನಿಕರನ್ನು ಒತ್ತಾಯಿಸಿದ್ದಾರೆ.
ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ ಜಮ್ಮು ಮತ್ತು ಕಾಶ್ಮೀರದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಬುಡ್ಡಾಮ್ನಲ್ಲಿ ಹದಿಹರೆಯದ ಬಾಲಕಿಯ ಹತ್ಯೆ ಆಘಾತಕಾರಿ ಮತ್ತು ತೀವ್ರ ದುಃಖಕರವಾಗಿದೆ ಎಂದು ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಹೇಳಿದ್ದಾರೆ.
“ಈ ಘಟನೆ ಕುರಿತು ಸೂಕ್ತ ತನಿಖೆ ನಡೆಯುತ್ತಿದೆ. ನಮ್ಮ ಚಿಕ್ಕ ಮಕ್ಕಳೇ ಸುರಕ್ಷಿತರಾಗಿಲ್ಲದ ಪರಿಸ್ಥಿತಿಯಲ್ಲಿ ಸಮಾಜ ಯಾವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂಬುದರ ಕುರಿತು ಚಿಂತನೆ ನಡೆಸುವುದು ಕೂಡ ಅಗತ್ಯವಾಗಿದೆ. ಈ ಕ್ರೂರ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಬಾಲಕಿಯ ಕುಟುಂಬಕ್ಕೆ ನನ್ನ ಸಂತಾಪವನ್ನು ಸೂಚಿಸುತ್ತೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಲು ಸರಕಾರ ತನಿಖಾ ಸಂಸ್ಥೆಗಳಿಗೆ ಸಾಧ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಿದೆ” ಎಂದು ಉಮರ್ ಅಬ್ದುಲ್ಲಾ ಹೇಳಿದ್ದಾರೆ.