ಆಂಧ್ರಪ್ರದೇಶದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ; ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50,000 ಪರಿಹಾರ

ನವದೆಹಲಿ: ಆಂಧ್ರಪ್ರದೇಶದ (Andhra Pradesh) ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಏಕಾದಶಿ ಹಿನ್ನೆಲೆಯಲ್ಲಿ ಭಾರೀ ಜನಸಮೂಹ ಸೇರಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಜನರು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಹಾಗೇ, ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

“ಶ್ರೀಕಾಕುಳಂನ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದ ಕಾಲ್ತುಳಿತದಿಂದ ದುಃಖಿತನಾಗಿದ್ದೇನೆ. ತಮ್ಮ ಆತ್ಮೀಯರನ್ನು ಕಳೆದುಕೊಂಡವರೊಂದಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ.
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ. ಮೃತರ ಕುಟುಂಬಸ್ಥರಿಗೆ ಈ ಆಘಾತ ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಪ್ರತಿಕ್ರಿಯಿಸಿದ್ದಾರೆ.
ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಜೀವಹಾನಿ ಸಂಭವಿಸಿದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ದುಃಖ ವ್ಯಕ್ತಪಡಿಸಿದ್ದಾರೆ. ಎಕ್ಸ್ನಲ್ಲಿ ಈ ಬಗ್ಗೆ ಮಾಡಿದ ಪೋಸ್ಟ್‌ನಲ್ಲಿ ಅವರು ಈ ದುರಂತ ಘಟನೆಯಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ. ಅವರು ದುಃಖಿತ ಕುಟುಂಬಗಳಿಗೆ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.
ಏಕಾದಶಿಯ ಸಂದರ್ಭದಲ್ಲಿ ಸಾವಿರಾರು ಭಕ್ತರು ದೇವಾಲಯದಲ್ಲಿ ದೇಚರ ದರ್ಶನಕ್ಕೆ ಆಗಮಿಸಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ 10 ಜನರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಸುಮಾರು 3,000ರಿಂದ 5,000 ಭಕ್ತರಿಗೆ ಸ್ಥಳಾವಕಾಶ ಕಲ್ಪಿಸಬಹುದಾದ ದೇವಾಲಯದ ಆವರಣದಲ್ಲಿ 25,000ಕ್ಕೂ ಹೆಚ್ಚು ಜನರು ಪಾದಯಾತ್ರೆ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.