ನೈಟ್ ಬೀಟ್ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಇಬ್ಬರು ಕಿರಾತಕರು ಕೇರಳದಲ್ಲಿ ಸಿಸಿಬಿ ಬಲೆಗೆ!

ಮಂಗಳೂರು : ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೈಟ್ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಸಿಮೆಂಟ್ ಶೀಟ್ನಿಂದ ಭೀಕರವಾಗಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕೇರಳದ ಕಾಂಞಿಗಾಡ್ನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಸಚಿನ್ ಕೆ.ಆರ್ (24) ಮತ್ತು ಪುತ್ತೂರು ತಾಲೂಕಿನ ನೆಲ್ಯಾಡಿಯ ಚಂದನ್ (24) ಎಂದು ಗುರುತಿಸಲಾಗಿದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕೆಂಪು ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮೇ 24 ರಂದು ಮುಂಜಾನೆ ಸುಮಾರು 02:10 ಗಂಟೆಯ ವೇಳೆಗೆ ಉರ್ವ ಠಾಣಾ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಪೊಲೀಸ್ ಸಿಬ್ಬಂದಿ ಬೀಟ್ ಕರ್ತವ್ಯದಲ್ಲಿದ್ದರು. ಈ ವೇಳೆ ಕೆಂಪು ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಬಂದ ಈ ಇಬ್ಬರು ಯುವಕರು ನಡುರಾತ್ರಿ ಅಡ್ಡಾಡುತ್ತಿರುವುದನ್ನು ಕಂಡು ಪೊಲೀಸರು ತಡೆದು ಪ್ರಶ್ನಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಂಡು ಹೋಗಿದ್ದ ಆರೋಪಿಗಳು ಮತ್ತೆ ವಾಪಾಸ್ ಬಂದು ರಸ್ತೆ ಬದಿ ನಿಂತಿದ್ದ ಪೊಲೀಸರ ಮೇಲೆ ಸ್ಕೂಟರ್ ಹಿಂಬದಿಯಲ್ಲಿ ಕುಳಿತಿದ್ದ ಆರೋಪಿ, ಏಕಾಏಕಿ ಸಿಮೆಂಟ್ ಶೀಟ್ನ ತುಂಡಿನಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. ಹಲ್ಲೆಯಿಂದಾಗಿ ಪೊಲೀಸ್ ಸಿಬ್ಬಂದಿಯ ತಲೆಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ. ಈ ಘಟನೆ ಸಂಬಂಧಿಸಿದಂತೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಯತ್ನ ನಡೆಸಿದ ಆರೋಪದಡಿ ಉರ್ವ ಪೊಲೀಸ್ ಠಾಣೆಯಲ್ಲಿ ಅ.ಕ್ರ 57/2026, ಬಿಎನ್ಎಸ್ (BNS) ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ಸಿಸಿಬಿ ಪೊಲೀಸರು ತನಿಖೆ ತೀವ್ರಗೊಳಿಸಿ, ತಾಂತ್ರಿಕ ಸಾಕ್ಷ್ಯಾಧಾರಗಳ ನೆರವಿನಿಂದ ಆರೋಪಿಗಳು ಕೇರಳಕ್ಕೆ ಪಲಾಯನ ಮಾಡಿರುವುದನ್ನು ಪತ್ತೆಹಚ್ಚಿದ್ದಾರೆ. ಮೇ 26 ರಂದು ಕೇರಳದ ಕಾಂಞಿಗಾಡ್ ಪ್ರದೇಶದಲ್ಲಿದ್ದ ಆರೋಪಿಗಳನ್ನು ಸಿಸಿಬಿ ತಂಡ ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಪೊಲೀಸರಿಗೆ ಹಸ್ತಾಂತರಿಸಿದೆ.
ಬಂಧಿತ ಆರೋಪಿಗಳು ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಆರೋಪಿ ಸಚಿನ್ ಕೆ.ಆರ್ ಕುಂಟಿಕಾನದ ಫ್ಯಾಕ್ಟರಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರೆ, ಮತ್ತೊಬ್ಬ ಆರೋಪಿ ಚಂದನ್ ಕೂಳೂರಿನ ಕಾರು ಶೋರೂಮ್ನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ. ಸದ್ಯ ಉರ್ವ ಪೊಲೀಸರು ಆರೋಪಿಗಳ ವಿಚಾರಣೆ ಮುಂದುವರಿಸಿದ್ದಾರೆ.