ಕಾರು-ಬೈಕ್ ನಡುವೆ ಭೀಕರ ಅಪಘಾತ; ತಂದೆ ಮತ್ತು 6 ವರ್ಷದ ಪುತ್ರ ಸಾ*ವು

ಹಾಸನ : ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಹಾಗೂ 6 ವರ್ಷದ ಮಗ ಮೃತಪಟ್ಟ ಘಟನೆ ಹಾಸನ ನಗರದ ಬಿಟ್ಟಗೌಡನಹಳ್ಳಿಯ ದೇವೇಗೌಡ ನಗರದ ಸಮೀಪ ನಡೆದಿದೆ. ಘಟನೆಯಲ್ಲಿ ಪತ್ನಿ ಮತ್ತು ಮತ್ತೋರ್ವ ಮಗ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರನ್ನು ಗೊರೂರಿನ ನಿವಾಸಿಗಳಾದ ಜಯಣ್ಣ (38) ಹಾಗೂ ಅವರ ಪುತ್ರ ಮಿಥುನ್ ರೈ (6) ಎಂದು ಗುರುತಿಸಲಾಗಿದೆ. ಜಯಣ್ಣ ಅವರ ಪತ್ನಿ ರಜಿನಿ ಹಾಗೂ ಮತ್ತೋರ್ವ ಪುತ್ರ ಮಿಲನ್ ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಜಯಣ್ಣ ಅವರು ಕುಟುಂಬ ಸಮೇತರಾಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹಾಸನಕ್ಕೆ ಬಂದಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಬೈಕ್ ನಲ್ಲಿ ವಾಪಸ್ ಗೊರೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಅರಕಲಗೂಡು ಕಡೆಯಿಂದ ಹಾಸನದತ್ತ ಬರುತ್ತಿದ್ದ ಕಾರು ಮತ್ತೊಂದು ವಾಹನವನ್ನು ಓವರ್ಟೇಕ್ ಮಾಡಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್ಗೆ ನೇರವಾಗಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಢಿಕ್ಕಿಯ ತೀವ್ರತೆಗೆ 6 ವರ್ಷದ ಮಿಥುನ್ ರೈ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಜಯಣ್ಣ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಹಾಸನ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.